ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿದ ಕೇಂದ್ರ ಸರ್ಕಾರ; ಅಧಿಸೂಚನೆ
ನವದೆಹಲಿ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ.
ವಿರೋಧದಿಂದ ಕಳೆದ ನಾಲ್ಕೈದು ವರ್ಷಗಳಿಂದ ಜಾರಿಯಾಗದೆ ಬಾಕಿ ಉಳಿದಿದ್ದ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡುವ ಮೂಲಕ ಲೋಕಸಭೆ ಚುನಾವಣೆಯ ಪ್ರಮುಖ ವಿಚಾರ ಆಗಲಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ವಿದೇಶಿ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆ ಅವಕಾಶ ಮಾಡಿಕೊಡುತ್ತದೆ. ಭಾರತದ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮೇತರರಿಗೆ ಧರ್ಮದ ಆಧಾರದಲ್ಲಿ ಪೌರತ್ವ ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೂ ಮುನ್ನ ಈ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಮಾತ್ರ ಇದರ ಅನುಕೂಲ ದೊರೆಯಲಿದೆ.