ಹುಬ್ಬಳ್ಳಿ: ತೋಟಗಾರಿಕೆ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ. ಅವರಿಗೂ ಸಹ ಮೇಳದಲ್ಲಿ ಭಾಗಿಯಾಗಿದ್ದರಿಂದ ಹೆಚ್ಚಿನ ಅನುಭವ ದೊರಕಲಿದೆ. ಮೇಳದಿಂದ ಜನರಿಗೆ ಹಾಗೂ ಮಾರುಕಟ್ಟೆಗೆ ಅನುಕೂಲವಾಗುತ್ತದೆ. ಬೇರೆ ಬೇರೆ ಜಿಲ್ಲೆಯ ಜನರು ಮೇಳದಲ್ಲಿ ಭಾಗವಹಿಸುತ್ತಿದ್ದಾರೆ. ಮೇಳ ಆಯೋಜನೆ ಮಾಡಿರುವುದು ಖುಷಿ ನೀಡಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಇಂದು ಮೂರು ಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ತೋಟಗಾರಿಕೆ ಇಲಾಖೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರ ಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಹಾಗೂ ಉಳುವಾಯೋಗಿ ರೈತ ಉತ್ಪಾದಕ ಸಂಸ್ಥೆ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 12 ನೇ ಒಣ ಮೆಣಸಿನಕಾಯಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಫೆಬ್ರವರಿ 3 ರಂದು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಹಾಗೂ ಪ್ರಸಾದ್ ಅಬ್ಬಯ್ಯ ಅವರ ಮತಕ್ಷೇತ್ರದ ಫಲಾನುಭವಿಗಳಿಗೆ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 20 ಸಾವಿರಕ್ಕೂ ಅಧಿಕ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 5 ರಂದು ಶಾಸಕರಾದ ಅರವಿಂದ ಬೆಲ್ಲದ ಮತ್ತು ವಿನಯ ಕುಲಕರ್ಣಿ ಅವರು ಮತಕ್ಷೇತ್ರದ ಫಲಾನುಭವಿಗಳಿಗೆ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು. ಮುಂದಿನ ದಿನಗಳಲ್ಲಿ ನವಲಗುಂದ, ಕುಂದಗೋಳ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಇದೇ ಕಾರ್ಯಕ್ರಮವನ್ನು ಮುಂದುವರೆಸಲಾಗುವುದು. ಅಲ್ಲದೇ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸುಮಾರು 1 ಲಕ್ಷಕ್ಕೂ ಅಧಿಕ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್.ಗಿರೀಶ, ಪ್ರಧಾನ ವ್ಯವಸ್ಥಾಪಕರಾದ ಸಿದ್ಧರಾಮಯ್ಯ ಮು. ಬರಗಿಮಠ, ತೋಟಗಾರಿಕೆ ಇಲಾಖೆಯ ಅಧಿಕಾರಿ ಯೋಗೇಶ ಕಿಲಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.