ಹುಬ್ಬಳ್ಳಿ: ರಾಜ್ಯ ಸರಕಾರಿ ಸಾರಿಗೆ ಸಂಸ್ಥೆಗಳ ಬಸ್ ಗಳ ಓಡಾಟಕ್ಕೆ ಅನುಮತಿ ನೀಡಲಾಗಿದ್ದು ಈಗ ನಗರದ ಬಸ್ ನಿಲ್ದಾಣಗಳಲ್ಲಿ ಬಸ್ ಸಂಚಾರಕ್ಕೆ ಸಹ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರ ಬೇಡಿಕೆ ಹಾಗೂ ಆದ್ಯತೆ ಮೇರೆಗೆ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಬಸ್ಸುಗಳ ಕಾರ್ಯಾಚರಣೆ ಆರಂಭಾವದರು ಪ್ರಯಾಣಿಕರು ಇತ್ತ. ಸುಳಿಯುತಿಲ್ಲ.
ರಾಜ್ಯದಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲ ನಿಬಂಧನೆಗಳನ್ನು ವಿಧಿಸಿ ಬಸ್ಸುಗಳ ಕಾರ್ಯಾಚರಣೆಗೆ ಅನುಮತಿ ನೀಡಿದೆ. ಹೀಗಾಗಿ ಸಂಸ್ಥೆ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಉತ್ತರಕನ್ನಡ, ಹಾವೇರಿ ಜಿಲ್ಲೆಗಳ 9 ವಿಭಾಗಗಳ ವ್ಯಾಪ್ತಿಯಲ್ಲಿ ಬಸ್ಸುಗಳು ಆರಂಭಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೊರತು ಪಡಿಸಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಸ್ಸುಗಳು ಸಂಚಾರ ಮಾಡಲಿವೆ. ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಆತಂಕ ಬೇಡ: ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ಬಸ್ಸುಗಳನ್ನು ದಿನನಿತ್ಯದ ನಿರ್ವಹಣೆ ಸ್ಯಾನಿಟೈಜ್ ಮಾಡುವುದರೊಂದಿಗೆ ವಾಹನಗಳನ್ನು ಸುಸ್ಥಿತಿಯಲ್ಲಿ ಡಲಾಗಿದೆ. ಪ್ರಯಾಣಿಕರ ಹಾಗೂ ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಶೇ 92 ರಷ್ಟು ಸಿಬ್ಬಂದಿ ಲಸಿಕೆ ಪಡೆದುಕೊಂಡಿದ್ದಾರೆ.
ಇದರೊಂದಿಗೆ ಕೋವಿಡ್ ಪರೀಕ್ಷೆಗೆ ಒಳಗಾಗಿ ನೆಗೆಟಿವ್ ವರದಿ ಇದ್ದವರನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಸಂಚಾರ ಮಾಡಬಹುದಾಗಿದೆ.
ಪಾಲನೆ ಕಡ್ಡಾಯ: ಬಸ್ಸುಗಳಲ್ಲಿ ಕೋವಿಡ್ ನಿಯಮಗಳನ್ನು ಪ್ರಯಾಣಿಕರು ಕಟ್ಟು ನಿಟ್ಟಾಗಿ ಪಾಲಿಸುವುದು ಕಡ್ಡಾಯವಾಗಿರುತ್ತದೆ. ಹಾಗೂ ಬಸ್ಸುಗಳು ಕಾರ್ಯಾಚರಿಸುವ ಎಲ್ಲ ನಿಲ್ದಾಣಗಳಲ್ಲಿ ಸರಕಾರದ ಮಾರ್ಗಸೂಚಿಯನ್ವಯ ಅಗತ್ಯ ಕ್ರಮ ಕೈಗೊಳ್ಳುವುದರೊಂದಿಗೆ ಪ್ರತಿಶತ 50 ರಷ್ಟು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಪ್ರಯಾಣಿಕರ ಬೇಡಿಕೆಗನುಗುಣವಾಗಿ ಕಾರ್ಯಾಚರಣೆ ನಡೆಯಲಿದೆ.
ಪ್ರಯಾಣಿಕರು ಕಡ್ಡಾವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು. ಪ್ರಯಾಣಿಕರ ಕುಳಿತುಕೊಳ್ಳುವ ಮೂರು ಆಸನಗಳಲ್ಲಿ ಇಬ್ಬರಿಗೆ ಹಾಗೂ ಎರಡು ಆಸನದಲ್ಲಿ ಒಬ್ಬರಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶವಿರುತ್ತದೆ.
ಚಾಲನಾ ಸಿಬ್ಬಂದಿಗಳು ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಂತಹ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿಯೋಜಿಸುವಂತೆ ಕಟ್ಟು ನಿಟ್ಟಾಗಿ ಘಟಕ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ.
