ಹುಬ್ಬಳ್ಳಿ; ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಸೇರಿದಂತೆ ಇತರರ ಮೇಲೆ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಸಂತೋಷ ಪಾಟೀಲ್ ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂಬ ಸಂದೇಶವನ್ನು ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಪ್ ಮಾಡಿದ್ದರು. ಹೀಗಾಗಿ ಸಚಿವರಾದ ಈಶ್ವರಪ್ಪ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ಎಫ್ ಐ ಆರ್ ದಾಖಲಿಸಬೇಕು ಎಂದು ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳವರು ಆಗ್ರಹಿಸಿದ್ದರು.ಸಂತೋಷ್ ಆತ್ಮಹತ್ಯೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮೊದಲ ಆರೋಪಿ ಸ್ಥಾನದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ಇದೆ.
*ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಸಂಪೂರ್ಣ ಮಾಹಿತಿ ಇಲ್ಲಿದೆ*
ಅ ಕ್ರ ನಂ: 56/2022 ಕಲಂ:306 Rw 34 IPC
ಕೃತ್ಯ ನಡೆದ ದಿನಾಂಕ: ದಿನಾಂಕ:11/04/2022 ರಂದು 23:00 ಗಂಟೆಯಿಂದ 12/04/2022 ರಂದು ಬೆಳಿಗ್ಗೆ 10:00 ಗಂಟೆ ಮಧ್ಯಾವಧಿಯಲ್ಲಿ
ತಕ್ಷೀರು ಸ್ಧಳ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ಇರುವ ಶಾಂಭವಿ ಲಾಡ್ಜ್ ರೂಮ್ ನಂ 207 ರಲ್ಲಿ
ವರದಿ ದಿನಾಂಕ:13/04/2022 ರಂದು 02:20 ಗಂಟೆಗೆ
ಪಿರ್ಯಾದುದಾರರು: ಪ್ರಶಾಂತ ಗೌಡಪ್ಪ ಪಾಟೀಲ ಪ್ರಾಯ: 42 ವರ್ಷ ತಂದೆ:ಗೌಡಪ್ಪ ವಾಸ: ಬಡಸ ಕೆ, ಎಚ್, ಗ್ರಾಮ, ಬೆಳಗಾವಿ ತಾಲೂಕು ಮತ್ತು ಜಿಲ್ಲೆ
ಆರೋಪಿತರು: 1) ಕೆ.ಎಸ್. ಈಶ್ವರಪ್ಪ 2) ಬಸವರಾಜ್ 3) ರಮೇಶ್ 4) ಇತರರು
ಈ ಪ್ರಕರಣದ ಸಂಕ್ಷಿಪ್ತ ಸಾರಾಂಶವೆನೇಂದರೆ, ಸನ್ 2020-21 ನೇ ಸಾಲಿನಲ್ಲಿ ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶ್ರೀ ಲಕ್ಷ್ಮೀ ದೇವಿ ಜಾತ್ರೆ ಜರುಗುವ ಹಿನ್ನೆಲೆಯಲ್ಲಿ ಊರಿನ ಪ್ರಮುಖರು ಮತ್ತು ಸ್ವಾಮಿಗಳು ಸೇರಿಕೊಂಡು ಗ್ರಾಮೀಣ ಅಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪನವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಜಾತ್ರೆಯ ವಿಷಯ ತಿಳಿಸಿ ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದ ರಸ್ತೆ ಕಾಮಗಾರಿ, ಚರಂಡಿ ಕಾಮಗಾರಿ, ಪೆವರ್ಸ್ ಜೋಡಣೆ ಇತ್ಯಾದಿ ಕಾಮಗಾರಿಗಳನ್ನು ಮಾನ್ಯರು ಮಾಡಿಕೊಡಬೇಕೆಂದು ಗ್ರಾಮಸ್ಥರು ಸಚಿವರಲ್ಲಿ ವಿನಂತಿಸಿಕೊಂಡಿರುತ್ತಾರೆ.
ಆಗ ಸಚಿವರು (ಕೆ.ಎಸ್ ಈಶ್ವರಪ್ಪನವರು) ನೀವು ನಮ್ಮ ಕಾರ್ಯಕರ್ತರು ಇದ್ದಿರಿ, ನೀವು ಕೆಲಸ ಶುರು ಮಾಡಿ, ನಾನು ಕಾಮಗಾರಿಗಳಿಗೆ ಎಷ್ಟೇ ಹಣ ಆದರೂ ಪರವಾಗಿಲ್ಲಾ ಕೆಲಸ ಶುರು ಮಾಡಿ ಎಂದು ಈಶ್ವರಪ್ಪನವರು ತಿಳಿಸಿದ್ದರು.
*4 ಕೋಟಿಗೂ ಅಧಿಕ ಮೊತ್ತದ ಕಾಮಗಾರಿ*
ಊರಿಗೆ ಹಿಂದಿರುಗಿದ ಪ್ರಮುಖರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಿಂಡಲಗಾ ಇವರು ಸಂತೋಷ್ ಕ ಪಾಟೀಲ್ ಈತನಿಗೆ ಕೆಲಸ ಪ್ರಾರಂಭಿಸಲು ತಿಳಿಸಿರುತ್ತಾರೆ. ಅದರಂತೆ ಸಂತೋಷ್ ಕ ಪಾಟೀಲ್ ಮತ್ತು ಉಳಿದ ಗುತ್ತಿಗೆದಾರರು ಸೇರಿಕೊಂಡು ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 4 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಯನ್ನು ಸ್ವಂತ ಹಣದಿಂದ ಹಾಗೂ ಇತರರ ಸಹಾಯದಿಂದ ಸರ್ಕಾರದ ಹಣವಿಲ್ಲದೇ ಪೂರ್ಣಗೊಳಿಸಿರುತ್ತಾರೆ.
ಸದ್ರಿ ಕಾಮಗಾರಿಗಳ ಬಿಲ್ ಗಾಗಿ ಸಚಿವರಾದ ಕೆ.ಎಸ್ ಈಶ್ವರಪ್ಪ ಮತ್ತು ಅವರ ಆಪ್ತರಾದ ಬಸವರಾಜ್ ಮತ್ತು ರಮೇಶ್ ರವರನ್ನು ಹಲವು ಸಾರಿ ಭೇಟಿಯಾಗಿ ಕೆಲಸ ಪೂರ್ಣಗೊಳಿಸಿದ್ದೇವೆ ಬಿಲ್ಲನ್ನು ಮಂಜೂರು ಮಾಡಲು ವಿನಂತಿಸಿಕೊಂಡಿರುತ್ತಾರೆ. ಆದರೆ ಅವರೆಲ್ಲರೂ ಹಾಗೆ ಕೆಲಸ ಆಗುವುದಿಲ್ಲಾ 40 ಪರ್ಸೆಂಟ್ ಕಮೀಷನ್ ನೀಡಿದರೆ ಬಿಲ್ ಪಾಸ್ ಮಾಡಿಸುವುದಾಗಿ ಹೇಳಿದ್ದರು.