ಬೆಂಗಳೂರು : ರಾಜ್ಯಸಭಾ ಚುನಾವಣಾ ಅಖಾಡ ತೀವ್ರ ಕುತೂಹಲವನ್ನುಂಟು ಮಾಡಿದ್ದು, ಬಿಜೆಪಿ ನಾಯಕರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಜೆಡಿಎಸ್ ನಾಯಕರು ಇದೀಗ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿರುವ ಜೆಡಿಎಸ್ ನಾಯಕರು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಬಿ.ಎಂ. ಫಾರೂಕ್ ಸೇರಿದಂತೆ ಜೆಡಿಎಸ್ ನ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕಾಂಗ್ರೆಸ್ ನ 2ನೇ ಅಭ್ಯರ್ಥಿಯನ್ನು ಹಿಂಪಡೆಯುವಂತೆ ಹಾಗೂ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಎಂ ಎಲ್ ಸಿ ಟಿ.ಎ. ಶರವಣ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಬೆಂಬಲಿಸಬಾರದು ಜೆಡಿಎಸ್ ಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದೇವೆ. ಕಾಂಗ್ರೆಸ್ ಗೆ 24 ಸದಸ್ಯ ಬಲವಿದೆ. ಜೆಡಿಎಸ್ ಗೆ 34 ಸದಸ್ಯ ಬಲವಿದೆ. ಹೀಗಿರುವಾಗ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬೆಂಬಲಿಸುವುದು ಪಕ್ಷದ ಧೋರಣೆಗೂ ಸೂಕ್ತವಲ್ಲ. ಹೀಗಾಗಿ ರಾಜಕೀಯ ನೆಲೆಗಟ್ಟಿನಲ್ಲಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುವಂತೆ ತಿಳಿಸಿದ್ದೇವೆ ಎಂದರು.