ಹುಬ್ಬಳ್ಳಿ: ‘ಹಿಂದಿನ ಚುನಾವಣೆಗಳಲ್ಲಿ ನಮ್ಮ ಎದುರಾಳಿಯಾಗಿರುತ್ತಿದ್ದ ಬಸವರಾಜ ಹೊರಟ್ಟಿ ಅವರು, ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಏಳು ಬಾರಿ ಪರಿಷತ್ ಪ್ರತಿನಿಧಿಸಿರುವ ಅವರು, ಈ ಬಾರಿ ದಾಖಲೆಯ ಗೆಲುವು ಪಡೆಯುವುದು ನಿಶ್ಚಿತ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದರು.
ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ನಗರದ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ, ಮಹಿಳಾ ವಿದ್ಯಾಪೀಠ ಹಾಗೂ ಕನಕದಾಸ ಶಿಕ್ಷಣ ಸಂಸ್ಥೆಗಳಲ್ಲಿ ಹೊರಟ್ಟಿ ಅವರ ಪರವಾಗಿ ಪ್ರಚಾರ ನಡೆಸಿ ಅವರು ಮಾತನಾಡಿದರು.
‘ಶಿಕ್ಷಕರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬಂದಿರುವ ಹೊರಟ್ಟಿ ಅವರು, ಪರಿಷತ್‍ನಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಕ್ಷೇತ್ರದ ಗಟ್ಟಿ ದನಿಯಾಗಿದ್ದಾರೆ. ಅವರ ಹಿರಿತನವನ್ನು ಪರಿಗಣಿಸಿ ಪಕ್ಷ ಟಿಕೆಟ್ ನೀಡಿದೆ. ಶಿಕ್ಷಕರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಅವರಿಗೆ ನೀಡಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.
ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಉಪ ಮೇಯರ್ ಉಮಾ ಮುಕುಂದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಮಹೇಂದ್ರ ಕೌತಾಳ, ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಸಂತೋಷ ಚವ್ಹಾಣ, ಜಿಲ್ಲಾ ವಕ್ತಾರ ರವಿ ನಾಯಕ, ಜಿ.ವಿ. ಭಟ್, ವಿರೂಪಾಕ್ಷಿ ರಾಯನಗೌಡ್ರ ಇದ್ದರು.
