ಹುಬ್ಬಳ್ಳಿ: ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಜಯ ಗಳಿಸಿದ ಹಿನ್ನೆಲೆಯಲ್ಲಿ, ದೇಶಪಾಂಡೆ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕಚೇರಿ ಎದುರು ಪಟಾಕಿಗಳನ್ನು ಸಿಡಿಸಿ ಹೊರಟ್ಟಿ ಮತ್ತು ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ‘ನಿರೀಕ್ಷೆಯಂತೆ ಬಸವರಾಜ ಹೊರಟ್ಟಿ ಅವರು ಸತತ ಎಂಟನೇ ಬಾರಿ ಗೆಲುವು ಸಾಧಿಸುವುದರೊಂದಿಗೆ, ಕರ್ನಾಟಕದ ರಾಜಕಾರಣದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ’ ಎಂದರು.
‘ಪಕ್ಷದ ನಾಲ್ಕೂ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಶ್ರಮದ ಫಲವಾಗಿ, ಹೊರಟ್ಟಿ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಪಕ್ಷದ ಕಾರ್ಯಕರ್ತರ ಹುರುಪನ್ನು ಹೆಚ್ಚಿಸಿದೆ’ ಎಂದು ಹೇಳಿದರು.
ದುರ್ದೈವ: ‘ಚುನಾವಣೆಯಲ್ಲಿ ಮತ ಚಲಾಯಿಸುವುದರ ಕುರಿತು ಶಿಕ್ಷಕ ಮತದಾರರಿಗೆ ಪಕ್ಷದ ವತಿಯಿಂದ ಪ್ರಾತ್ಯಕ್ಷಿಕೆ ಕೂಡ ನೀಡಲಾಗಿತ್ತು. ಆದರೂ, ಸಾವಿರಕ್ಕೂ ಹೆಚ್ಚು ಮತಗಳು ಅನರ್ಹವಾಗಿರುವುದು ದುರ್ದೈವದ ಸಂಗತಿ. ಅನರ್ಹ ಮತಗಳಲ್ಲಿ ಹೆಚ್ಚಿನ ಮತಗಳು ಬಿಜೆಪಿಯವೇ ಆಗಿದ್ದವು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಶಿವು ಮೆಣಸಿನಕಾಯಿ, ಮಲ್ಲಿಕಾರ್ಜುನ ಗುಂಡೂರ, ರವಿ ನಾಯಕ ಇದ್ದರು.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …