ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು, ಬೆಲೆ ಏರಿಕೆಯನ್ನು ತಡೆಗಟ್ಟಬೇಕು, ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕು, ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ನೀಡಬೇಕು, ಜನ ವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ತಕ್ಷಣವೇ ಹಿಂಪಡೆಯಬೇಕು, ಜನಪರ ಶಿಕ್ಷಣ ನೀತಿ ರೂಪಿಸಬೇಕು, ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಸರ್ಕಾರ ಎಲ್ಲರಿಗೂ ಉಚಿತ ಆರೋಗ್ಯ ಸೇವೆ ನೀಡಬೇಕು, ಜನವಿರೋಧಿ ವಿದ್ಯುತ್ ಕಾಯ್ದೆ-2022ಅನ್ನು ರದ್ದುಗೊಳಿಸಬೇಕು, ಮಹಿಳೆಯರ, ದಲಿತರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.